ಚಿಕ್ಕಮಗಳೂರು: ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಎಸ್.ಲಾಡ್ ತಿಳಿಸಿದರು.
ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ವಿಜಯಪುರದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಅಸಂಘಟಿತ ಕಾರ್ಮಿಕರಿಗೆ ಸೂಕ್ತ ಭದ್ರತೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ. ಜೊತೆಗೆ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಪದ ಕಲೆ, ಹೀಗೆ ವಿವಿಧ ರೀತಿಯಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ಕಾರ್ಮಿಕರಿಗೂ ಸೌಲಭ್ಯ ಜಾರಿಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಆಟೋ ರಿಕ್ಷಾ ಚಾಲಕರು, ಪೇಯಿಂಟಿಂಗ್ ಮಾಡುವವರು ಸೇರಿದಂತೆ ಹಲವರಿಗೆ ಕಾರ್ಮಿಕ ಕಾಯ್ದೆ ಜಾರಿಗೊಳಿಸಲಾಗಿದ್ದು, ಅಸಂಘಟಿತ ಕಾರ್ಮಿಕರು ಅಪಘಾತದಲ್ಲಿ ಮೃತರಾದಲ್ಲಿ ೫ ಲಕ್ಷ ರೂ.ವರೆಗೂ ಪರಿಹಾರ ವಿತರಿಸಲಾಗುತ್ತದೆ ಎಂದ ಅವರು, ಸ್ವಿಗ್ಗಿ, ಜೊಮೆಟೋಗಳಂತಹ ಸಂಸ್ಥೆಯಲ್ಲಿ ಆಹಾರ ಸರಬರಾಜು ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್‌ಕಾರ್ಟ್, ಪೋರ್ಟಲ್, ಫಾರ್ಮಸಿ, ಬ್ಲಿಂಕಿಟ್, ಬಿಗ್ ಬಾಸ್ಕೆಟ್, ಡೊಮಿನಾಜ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡವರೆಲ್ಲರೂ ಅಸಂಘಟಿತ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.
ದೇಶದಲ್ಲಿ ತಲಾ ಆದಾಯದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಮುಂಚೂಣಿಯಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಯಶಸ್ಸು ಕಾರಣ. ಆಶಾ ದೀಪ ಕಾರ್ಯಕ್ರಮದಲ್ಲಿ ಎಸ್‌ಸಿ, ಎಸ್‌ಟಿ ವರ್ಗದವರಿಗೆ ಕೆಲಸ ನೀಡುವವರಿಗೆ ರೂ. ೭೫೦೦ ರವರೆಗೆ ನೆರವು ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರು ಸೊಸೈಟಿ ಮೂಲಕ ಕಾರ್ಯ ನಿರ್ವಹಿಸಲಿದ್ದು, ಸಂಬಳ ಸಮಸ್ಯೆ ತಪ್ಪಲಿದೆ. ಮುಂದಿನ ದಿನಗಳಲ್ಲಿ ಮನೆ ಕೆಲಸ ಕಾರ್ಮಿಕರಿಗೆ ಕನಿಷ್ಠ ವೇತನ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಕರ್ನಾಟಕ ರಾಜ್ಯ ಸರ್ಕಾರವು ಅಸಂಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯನ್ನು ಅನು?ನಗೊಳಿಸಲಾಗುತ್ತಿದೆ ಎಂದರು.
ಪ್ರಾರಂಭಿಕವಾಗಿ ೨೬ ವರ್ಗಗಳ ಅಸಂಘಟತ ಕಾರ್ಮಿಕರನ್ನು ನೋಂದಾಯಿಸಲಾಗುತ್ತಿತ್ತು. ಪ್ರಸ್ತುತ ಹೊಸದಾಗಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದ ಪಾರಂಪರಿಕ ವೃತ್ತಿಯಲ್ಲಿ ತೊಡಗಿರುವ ೩೮ ವರ್ಗಗಳು ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಹಾಗೂ ಅರೆಅಲೆಮಾರಿ ಪಂಗಡದ ಕುಲಕಸುಬಿನಲ್ಲಿ ತೊಡಗಿರುವ ೨೭ ವರ್ಗಗಳ ಕಾರ್ಮಿಕರು ಸೇರಿದಂತೆ ಒಟ್ಟಾರೆ ೯೧ ವರ್ಗಗಳ ಕಾರ್ಮಿಕರನ್ನು ಉಚಿತವಾಗಿ ನೋಂದಾಯಿಸಿ ಸೌಲಭ್ಯಗಳನ್ನೊಳಗೊಂಡ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದ್ದು, ರಾಜ್ಯದಲ್ಲಿ ಸುಮಾರು ೩೫ ಲಕ್ಷ ಕಾರ್ಮಿಕರು ಇರುವುದಾಗಿ ಅಂದಾಜಿಸಲಾಗಿದೆ ಎಂದು ತಿಳಿಸಿದರು.
