ಪ್ರತಿಷ್ಠಿತ ‘ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ 2025’ಕ್ಕೆ ಕರ್ನಾಟಕ ಪಾತ್ರವಾಗಿದೆ. ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮವು ದೇಶದಲ್ಲಿ ಪ್ರಥಮ ಸ್ಥಾನ ಪಡೆದು 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಗೆ (ಎನ್‌ಇಸಿಎ) ಭಾಜನವಾಗಿದೆ.

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ. ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಪ್ರಶಸ್ತಿ ದೊರೆತಿದೆ.
ರಾಜ್ಯಕ್ಕೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, “ಈ ಪ್ರಶಸ್ತಿಯ ಹಿಂದೆ ಕ್ರೆಡಲ್ ಅಧಿಕಾರಗಳ ಶ್ರಮವಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ಕರ್ನಾಟಕವು ಇಂಧನ ದಕ್ಷತೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಉನ್ನತ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ. ರಾಜ್ಯ ಇಂಧನ ದಕ್ಷತೆ ಸೂಚ್ಯಂಕದಲ್ಲಿ (SEEI) ಸತತ ಮೂರು ವರ್ಷಗಳ ಕಾಲ ಅಂದರೆ, 2020-2021, 2022, ಮತ್ತು 2023ರಲ್ಲಿ “ಫ್ರಂಟ್ ರನ್ನರ್” ಸ್ಥಾನ ಗಳಿಸಿತ್ತು. 2024 ರಲ್ಲಿ, ರಾಜ್ಯಕ್ಕೆ ಎರಡನೇ ಬಹುಮಾನ ದೊರೆಕಿತ್ತು. ಇಂಧನ ದಕ್ಷತೆ ಸಾಧಿಸುವ ಬದ್ಧತೆಯಿಂದ ಈ ಬಾರಿ ಪ್ರಥಮ ಸ್ಥಾನ ಗಳಿಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ,” ಎಂದರು.
