ಶಿಕಾರಿಪುರ: ರಾಜ್ಯದ ಕಾಂಗ್ರೆಸ್ ಸರ್ಕಾರವು ಜಾರಿಗೆ ತರಲು ಹೊರಟಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ’ಯು ಪ್ರಜಾಪ್ರಭುತ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆಕ್ಷೇಪಿಸಿದ್ದಾರೆ. ಶಿಕಾರಿಪುರದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮಸೂದೆಯು 1975ರ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸುತ್ತಿದೆ ಮತ್ತು ವಿರೋಧ ಪಕ್ಷಗಳ ಹಾಗೂ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ‘ಭಾರತ್ ಮಾತಾ ಕೀ ಜೈ’ ಎನ್ನುವವರ ವಿರುದ್ಧ ಎಫ್‍ಐಆರ್ ದಾಖಲಿಸುವ ಮೂಲಕ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲಾಗುತ್ತಿದೆ ಮತ್ತು ವಿಧಾನಸೌಧದಲ್ಲೇ ದೇಶವಿರೋಧಿ ಘೋಷಣೆ ಕೂಗಿದವರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಅವರು ಕಿಡಿಕಾರಿದರು.
ಸರ್ಕಾರದ ಈ ದಮನಕಾರಿ ನೀತಿಯ ವಿರುದ್ಧ ಮುಂದಿನ ವಾರ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ನಿಯೋಗದೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರದ ಜನವಿರೋಧಿ ನಡೆಯನ್ನು ಅವರ ಗಮನಕ್ಕೆ ತಂದು ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಲಾಗುವುದು ಎಂದು ವಿಜಯೇಂದ್ರ ಈ ಸಂದರ್ಭದಲ್ಲಿ ತಿಳಿಸಿದರು.
