ಚಿಕ್ಕಮಗಳೂರು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಜನವರಿ 17 ರಂದು ಚುನಾವಣೆ ನಡೆಯಲಿದೆ.
ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಜ .9ನಾಮಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದ್ದು, ಜ.10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜ.11 ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಅಗತ್ಯವಿದ್ದಲ್ಲಿ ಜ.17 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನದ ಬಳಿಕ ಮತ ಎಣಿಕೆ ನಡೆಯಲಿದೆಯಲ್ಲದೆ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಸಲು ಕಳೆದ ಜೂನ್ 30 ರಂದು ಹೊರಡಿಸಲಾಗಿದ್ದ ಅಧಿಸೂಚನೆ ಹಿಂಪಡೆಯಲಾಗಿತ್ತು. ಇದೀಗ ಉಚ್ಚ ನ್ಯಾಯಾಲಯವು ನವೆಂಬರ್ 27 ರಂದು ಚುನಾವಣೆ ನಡೆಸುವಂತೆ ಆದೇಶ ನೀಡಿದೆ.
ಈ ಹಿನ್ನೆಲೆಯಲ್ಲಿ ಸಹಕಾರ ಚುನಾವಣಾ ಪ್ರಾಧಿಕಾರದ ಆಯುಕ್ತರು ಜನವರಿ 17 ರಂದು ಚುನಾವಣೆ ನಡೆಸಲು ಅನುಮತಿ ನೀಡಿ, ಇದೀಗ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
