Friday, March 27, 2026
Homeಕ್ರೈಮ್ಹುಬ್ಬಳ್ಳಿ ಪೊಲೀಸ್ ದೌರ್ಜನ್ಯ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಹುಬ್ಬಳ್ಳಿ ಪೊಲೀಸ್ ದೌರ್ಜನ್ಯ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರು ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಮಹಿಳಾ ಆಯೋಗವು ಈಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಮಹಿಳೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ಪೊಲೀಸ್ ವಾಹನದೊಳಗೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಈ ಆಘಾತಕಾರಿ ದೃಶ್ಯಗಳನ್ನು ಗಮನಿಸಿದ ಆಯೋಗವು ತಕ್ಷಣವೇ ಮಧ್ಯಪ್ರವೇಶಿಸಿದ್ದು, ಘಟನೆಯ ತನಿಖೆಗೆ ಆದೇಶಿಸಿದೆ.

ಈ ಕುರಿತು ಕರ್ನಾಟಕದ ಡಿಜಿಪಿ ಅವರಿಗೆ ಪತ್ರ ಬರೆದಿರುವ ಆಯೋಗದ ಅಧ್ಯಕ್ಷೆ ವಿಜಯಾ ರಹಟ್ಕರ್ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯವು ಮಹಿಳೆಯ ವ್ಯಕ್ತಿತ್ವದ ಗೌರವ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ಲಿಂಗ ಆಧಾರಿತ ಹಿಂಸೆಯಿಂದ ರಕ್ಷಣೆಯ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಪೋಲಿಸ್ ಇಲಾಖೆಯ ಈ ನಡವಳಿಕೆಯು ಸಮಾಜದಲ್ಲಿ ಮಹಿಳೆಯರ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವಂತೆ ಮಾಡಿದೆ ಎಂದು ಆಯೋಗವು ಅಭಿಪ್ರಾಯಪಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣವೇ ಎಫ್‌ಐಆರ್ ದಾಖಲಿಸಿ, ಲಭ್ಯವಿರುವ ವಿಡಿಯೋ ಸಾಕ್ಷ್ಯಗಳನ್ನು ಪರಿಶೀಲಿಸುವ ಮೂಲಕ ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಯೋಗ ಸೂಚಿಸಿದೆ.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಇಲಾಖಾ ಮತ್ತು ಕ್ರಿಮಿನಲ್ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಂತ್ರಸ್ತ ಮಹಿಳೆಗೆ ವೈದ್ಯಕೀಯ ನೆರವು, ಮಾನಸಿಕ ಬೆಂಬಲ ಮತ್ತು ಕಾನೂನುಬದ್ಧ ಪುನರ್ವಸತಿ ಸೌಲಭ್ಯಗಳನ್ನು ಒದಗಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಎಲ್ಲಾ ಕ್ರಮಗಳ ಕುರಿತು ವಿವರವಾದ ವರದಿಯನ್ನು ಮುಂದಿನ 5 ದಿನಗಳೊಳಗೆ ಸಲ್ಲಿಸಬೇಕೆಂದು ಆಯೋಗವು ರಾಜ್ಯ ಪೊಲೀಸ್ ಇಲಾಖೆಗೆ ಗಡುವು ನೀಡಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!