Monday, June 1, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತಾ?: TD ರಾಜೇಗೌಡರನ್ನ ಮಂತ್ರಿ ಮಾಡುವಂತೆ ಡಿಮ್ಯಾಂಡ್!

ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತಾ?: TD ರಾಜೇಗೌಡರನ್ನ ಮಂತ್ರಿ ಮಾಡುವಂತೆ ಡಿಮ್ಯಾಂಡ್!

ಚಿಕ್ಕಮಗಳೂರು : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ವಲಯದಲ್ಲಿ ಸಚಿವ ಸ್ಥಾನದ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಆಗಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಸಾಧ್ಯತೆಗಳು ಹೆಚ್ಚಾಗಿದ್ದು, ಈ ಬಾರಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯಬಹುದೇ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲೂ ಜಯ ಗಳಿಸಿ ಗಮನ ಸೆಳೆದಿತ್ತು. ಬಿಜೆಪಿ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣ ಮೇಲುಗೈ ಸಾಧಿಸಿದ್ದರಿಂದ ಜಿಲ್ಲೆಯೊಬ್ಬ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಆಗಲೇ ವ್ಯಕ್ತವಾಗಿತ್ತು. ಆದರೆ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಶಾಸಕರಿಗೆ ಅವಕಾಶ ದೊರೆಯಲಿಲ್ಲ. ಪರಿಣಾಮವಾಗಿ ಇಂಧನ ಸಚಿವ ಕೆ. ಜೆ. ಜಾರ್ಜ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನಿರ್ವಹಿಸುತ್ತಾ ಬಂದಿದ್ದಾರೆ.

ಈಗ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ನಂತರ ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಜೋರಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಿಂದ ಇಬ್ಬರು ಕಾಂಗ್ರೆಸ್ ಶಾಸಕರ ಹೆಸರುಗಳು ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿವೆ. ತರೀಕೆರೆ ಕ್ಷೇತ್ರದ ಶಾಸಕ ಜಿ. ಹೆಚ್. ಶ್ರೀನಿವಾಸ್​ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ. ಹೆಚ್. ಶ್ರೀನಿವಾಸ್​ ಅವರು ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ. “ಪಕ್ಷ ಅವಕಾಶ ನೀಡಿದರೆ ಸಚಿವನಾಗಿ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಸಿದ್ಧನಿದ್ದೇನೆ. ನನ್ನ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಇನ್ನೊಂದೆಡೆ ಶೃಂಗೇರಿ ಶಾಸಕ ಟಿ. ಡಿ. ರಾಜೇಗೌಡ ಅವರು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರ್ಯಕರ್ತರು ಹಾಗೂ ಮತದಾರರ ಬೆಂಬಲವೇ ಕಾರಣ ಎಂದುರು. ‘ಈ ಹಿಂದೆ ಪಕ್ಷ ಹಲವು ಜವಾಬ್ದಾರಿಗಳನ್ನು ನೀಡಿದಾಗ ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಸಚಿವ ಸ್ಥಾನ ನೀಡಿದರೆ ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸಲು ಸಿದ್ಧನಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ಚಿಕ್ಕಮಗಳೂರು ಜಿಲ್ಲೆಗೆ ಹಲವು ವರ್ಷಗಳಿಂದ ಹೊರ ಜಿಲ್ಲೆಯವರೇ ಉಸ್ತುವಾರಿ ಸಚಿವರಾಗಿರುವುದು ವಿಶೇಷವಾಗಿದೆ. ಜಿಲ್ಲೆಯವರಿಗೆ ಸಚಿವ ಸ್ಥಾನ ಹಾಗೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಸಿಗಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದೆ.ಹೀಗಾಗಿ, ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಸಕರಿಗೆ ಅವಕಾಶ ದೊರೆಯುತ್ತದೆಯೇ? ಜಿಲ್ಲೆಯ ಮೇಲೆ ಇರುವ ‘ಗೆಸ್ಟ್ ಉಸ್ತುವಾರಿ’ ಮುದ್ರೆ ಅಳಿದು ಸ್ಥಳೀಯ ನಾಯಕನಿಗೆ ಸಚಿವ ಸ್ಥಾನ ಸಿಗುತ್ತದೆಯೇ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!