ಮೂಡಿಗೆರೆ: ಚಿಕ್ಕಮಗಳೂರಿನ ವಕೀಲೆ ಸಂಗೀತ ಪ್ರಸಾದ್ ಅವರು ಮೂಡಿಗೆರೆಯ ಅಭಿವೃದ್ಧಿ ವಿಚಾರ ಹಾಗೂ ಶಾಸಕಿ ನಯನಾ ಮೋಟಮ್ಮ ವಿರುದ್ಧ ಮಾತನಾಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ದೂರು-ಪ್ರತಿದೂರುಗಳು ದಾಖಲಾಗಿವೆ. ಮೂಡಿಗೆರೆಯ ಎಂಜಿಎಂ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಚಂದ್ರು ಒಡೆಯರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬೆದರಿಕೆ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂಗೀತ ಪ್ರಸಾದ್, ಯಾವುದೇ ಆಡಳಿತಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕರ್ತವ್ಯನಿರತ ಸಿಬ್ಬಂದಿಗೆ ಅಡ್ಡಿಪಡಿಸಿ ವೀಡಿಯೋ ಶೂಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಆ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಲ್ಲದೆ, ಆಸ್ಪತ್ರೆಯ ಉನ್ನತೀಕರಣಕ್ಕೆ ತಾವೇ ಕಾರಣ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಚಂದ್ರು ಒಡೆಯರ್ ದೂರು ನೀಡಿದ್ದಾರೆ. ಆಸ್ಪತ್ರೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಮಿತಿಯ ಶ್ರಮವನ್ನು ಕಡೆಗಣಿಸಿ, ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಪ್ರಕರಣದ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.
ಸಾಮಾಜಿಕ ಸಂಸ್ಥೆಯೊಂದರ ವಿಶ್ವಾಸಾರ್ಹತೆ ಕಾಪಾಡಿಕೊಳ್ಳುವುದು ಅತ್ಯಗತ್ಯ. ಹೀಗಿರುವಾಗ, ಸಮಾಜ ಸೇವೆಯ ಹೆಸರಿನಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ನಿಜಕ್ಕೂ ಜನಸೇವೆಯೇ ಎಂದು ಚಂದ್ರು ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
