ಕಳಸ: ಕಾಫಿ ತೋಟದ ಲೇಬರ್ ಲೈನ್‌ನಲ್ಲಿ ವಾಸಿಸುತ್ತಿದ್ದ ಕಾರ್ಮಿಕರ ನಡುವೆ ಹಠಾತ್ತಾಗಿ ಪ್ರಾರಂಭವಾದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡು, ಕೊನೆಯಲ್ಲಿ ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಾರ್ಮಕ್ಕಿ ಸಮೀಪದ ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ.
ಹಾವೇರಿ ಮೂಲದ ಭೀಮ (42) ಎಂಬುವವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅದೇ ವೇಳೆ, ರೊಚ್ಚಿಗೆದ್ದ ಆರೋಪಿಯು ಮತ್ತೊಬ್ಬ ಕಾರ್ಮಿಕನ ಮೇಲೆಯೂ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ.
ಘಟನೆ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ಫಕೀರಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಾಯ್ಕಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿದೆ.
