ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ಬಂದ್ʼಗೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವುದೇ ಬೆಂಬಲ ಸಿಗದೇ ಜನಜೀವನ ಸಹಜವಾಗಿಯೇ ಮುಂದುವರೆದಿದೆ. ನಗರದಲ್ಲಿ ಬಸ್ ಮತ್ತು ಆಟೋಗಳ ಸಂಚಾರ ಎಂದಿನಂತೆ ಸಾಗುತ್ತಿದು ಅಂಗಡಿ ಮುಂಗಟ್ಟುಗಳು ಮತ್ತು ವ್ಯಾಪಾರ ವಹಿವಾಟುಗಳು ಸಹ ಸಾಮಾನ್ಯ ರೀತಿಯಲ್ಲೇ ಮುಂದುವರೆದಿದೆ. ಬಂದ್ ಗೆ ಕರೆ ನೀಡಿದ್ರೂ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಿಲ್ಲ.ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಕೆಲವೆಡೆ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಈ ಬಂದ್ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದ್ದು ವಿವಿಧ ಸಂಘಟನೆಗಳಿಂದ ನೈತಿಕ ಬೆಂಬಲ ಸಿಕ್ಕಿದೆ. ರೈತಪರ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆದಿದ್ದು ಮೆರವಣಿಗೆ ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿದ್ದಾರೆ.
