ಕೊಪ್ಪ: ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಪ್ರಕ್ರಿಯೆ ಮುಂದಿನ ವಾರದಿಂದ ಆರಂಭವಾಗಲಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮರುಪರಿಶೀಲನೆಗಾಗಿ ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮರುಪರಿಶೀಲನಾ ಕಾರ್ಯಕ್ಕಾಗಿ ತರಬೇತಿ ಪಡೆದ ಅಂಗನವಾಡಿ ಶಿಕ್ಷಕರು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯರು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು, ಗಣತಿದಾರರು ಮನೆಗೆ ಭೇಟಿ ನೀಡಿದಾಗ ಸೂಕ್ತ ಮಾಹಿತಿ ಹಾಗೂ ದಾಖಲೆಗಳನ್ನು ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.
ಫಲಾನುಭವಿಗಳ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸುವ ಮೂಲಕ ಮರುಪರಿಶೀಲನಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಸಹಕರಿಸುವಂತೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮನವಿ ಮಾಡಿದೆ.
