ಮೂಡಿಗೆರೆ: ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮೂಡಿಗೆರೆ ಪಟ್ಟಣದ ವಿವಿಧ ಭಾಗಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯಗಳನ್ನು ನಿರ್ಮಿಸಲು ಉದ್ದೇಶಿಸಿರುವ ಸ್ಥಳಗಳನ್ನು ಶಾಸಕರು ಹಾಗೂ ಅಧಿಕಾರಿಗಳು ಪರಿಶೀಲಿಸಿದರು. ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಜಾಗಗಳ ಕುರಿತು ಚರ್ಚೆ ನಡೆಸಲಾಯಿತು.
ಘನ ತ್ಯಾಜ್ಯ ನಿರ್ವಹಣೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಅಗತ್ಯ ಮಾಹಿತಿಯನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಹೊಸಕೆರೆ ರಮೇಶ್, ರವಿ ಕುನ್ನಳ್ಳಿ, ರಘು ಮಗಲಮಕ್ಕಿ , ಅಜ್ಜು,ಮೂಡಿಗೆರೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕಲಾವತಿ, ಇಂಜಿನಿಯರ್ ಇರ್ಷಾದ್ ಸೇರಿದಂತೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
