ಚಿಕ್ಕಮಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿಎಆರ್ ಹಾಗೂ ಡಿಎಆರ್ ವೃಂದದ ಒಟ್ಟು 1,600 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 6ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಚಿಕ್ಕಮಗಳೂರು ಜಿಲ್ಲಾಡಳಿತ ಬಿಗಿ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುತ್ತಿರುವ ಈ ಪರೀಕ್ಷೆಯು ಸೆಪ್ಟೆಂಬರ್ 6ರ ಭಾನುವಾರ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 12:00ರವರೆಗೆ ನಗರದ ಮೂರು ಪ್ರಮುಖ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ಆಯೋಜಿಸಲಾಗಿದೆ.
ಪರೀಕ್ಷೆಯ ಪಾವಿತ್ರತೆ, ಶಿಸ್ತು ಹಾಗೂ ಗೌಪ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) 2023ರ ಕಲಂ 163ರ ಅನ್ವಯ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಈ ಆದೇಶದನ್ವಯ ಪರೀಕ್ಷಾ ದಿನದಂದು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಗರದ ಬೇಲೂರು ರಸ್ತೆಯ ಎಸ್.ಟಿ.ಜೆ. ಮಹಿಳಾ ಪಿಯು ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಬಸವನಹಳ್ಳಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಹಾಗೆ ಪರೀಕ್ಷಾರ್ಥಿಗಳು ಹಾಗೂ ಕರ್ತವ್ಯನಿರತ ಸಿಬ್ಬಂದಿಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದಕ್ಕೆ ಸಂಪೂರ್ಣ ಕಡಿವಾಣ ಹಾಕಲಾಗಿದ್ದು, ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
