ಎನ್. ಆರ್.ಪುರ: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಮನವಿ ಸಲ್ಲಿಸಲಾಯಿತು.
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮಠದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಸ್ತೂರಿ ರಂಗನ್ ವರದಿ ಜಾರಿ ಕುರಿತು ರೈತರ ಅಹವಾಲುಗಳನ್ನು ಆಲಿಸಲು ಆಗಮಿಸಿದ್ದ ಸಂದರ್ಭದಲ್ಲಿ ಈ ಮನವಿ ಸಲ್ಲಿಸಲಾಯಿತು.
ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಸ್ವಾಮೀಜಿಗಳು ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಸೋಮಯ್ಯಾ ಗಣಾಚಾರಿ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡುವಂತೆ ಮನವಿ ಮಾಡಿದರು. ಸಂಸ್ಥಾನ ಹಿರೇಮಠ, ವಿಜಯಪುರದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸೋಮಯ್ಯಾ ಗಣಾಚಾರಿ ಅವರು ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರಾಗಿದ್ದು, ಅವರಿಗೆ ವಿಧಾನ ಪರಿಷತ್ನಲ್ಲಿ ಅವಕಾಶ ಕಲ್ಪಿಸಬೇಕೆಂದು ಸ್ವಾಮೀಜಿಗಳು ಮುಖ್ಯಮಂತ್ರಿಗೆ ಮನವಿ ಮಾಡಿದರು.
