ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು.

ಅನಂತರ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರ ಸ್ವೀಕರಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರು, ಪೆನ್‌ಡ್ರೈವ್ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದ್ದು ತನಿಖಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಇದೆ ವೇಳೆ ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶು ಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ. 101 ನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಎಂದು ಪೌರಾಣಿಕ ಹಿನ್ನೆಲೆಯ ಕಥೆಯ ಸಂದೇಶವನ್ನು ನೀಡೋ ಮೂಲಕ ರೇವಣ್ಣ ಕುಟುಂಬದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲರಿಗೂ ಈಗ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ದರು.ಇದಕ್ಕೆ ಇವತ್ತು ಕುಮಾಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ಈ ಹೇಳಿಕೆಗಳನ್ನ ಕೊಡಲು ಅಧಿಕಾರ ಕೊಟ್ಟವರಾರು? ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ರೀತಿಯ ಹೇಳಿಕೆ ಕೊಟ್ಟ ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಮೇಲೆ ಏನು ಕ್ರಮ ತೆಗೆದುಕೊಳ್ತೀರಾ ಎಂದು ಸಿಎಂ ಸಿದ್ದರಾಮಯ್ಯನವರಿಗೆ ನೇರವಾಗಿ ಪ್ರಶ್ನೆ ಕೇಳಿದ್ದಾರೆ.