ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಗಂಡಿಯಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 59 ವರ್ಷದ ಸುಂದರ ಮೊಯಿಲಿ ಎಂಬುವವರ ಮೇಲೆ ಕಾಡುಕೋಣ ಏಕಾಏಕಿ ಭೀಕರ ದಾಳಿ ನಡೆಸಿದೆ.
ಕಾಡುಕೋಣ ರಭಸದಿಂದ ತಿವಿದ ಪರಿಣಾಮ ಪಕ್ಕದ ಚರಂಡಿಗೆ ಬಿದ್ದ ಅವರ ಸೊಂಟ ಹಾಗೂ ಬೆನ್ನಿನ ಭಾಗಕ್ಕೆ ತೀವ್ರ ಪೆಟ್ಟು ಬಿದ್ದಿದೆ. ಕೂಡಲೇ ಸ್ಥಳೀಯರು ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಿದ್ದು, ಗಾಯ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಕಳಸ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಿರಂತರ ಕಾಡುಪ್ರಾಣಿಗಳ ಕಾಟಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
