ಚಿಕ್ಕಮಗಳೂರ: ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಅವರು ಬುಧವಾರ ಸಂಜೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರ ಎಂದು ಶೃಂಗೇರಿ ಕ್ಷೇತ್ರದ ರೈತರ ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ್ ಗದ್ದೆಮನೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಕಾಡಾನೆಗಳ ನಿರಂತರ ಹಾವಳಿಯಿಂದ ಮಲೆನಾಡಿನ ರೈತರ ಜೀವ ಮತ್ತು ಜೀವನೋಪಾಯ ಎರಡೂ ಅಪಾಯಕ್ಕೆ ಸಿಲುಕಿವೆ. ತಮ್ಮದೇ ತೋಟ, ಗದ್ದೆಗಳಲ್ಲಿ ನಿರ್ಭಯವಾಗಿ ಕೆಲಸ ಮಾಡಲು ಸಾಧ್ಯವಾಗದಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಮೃತ ರೈತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಕುಟುಂಬದ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಭಗವಂತನು ಅವರ ಆತ್ಮಕ್ಕೆ ಶಾಂತಿ, ಸದ್ಗತಿ ಕರುಣಿಸಲಿ.
ಇನ್ನೆಷ್ಟು ರೈತರ ಜೀವ ಬಲಿಯಾಗಬೇಕು?
ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಯಾವಾಗ? ರೈತರ ಜೀವಕ್ಕೆ ರಕ್ಷಣೆ ಯಾವಾಗ? ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮ ಕೈಗೊಂಡು, ರೈತರ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
