ಮೂಡಿಗೆರೆ:ಸಹಕಾರ ಸಂಘಗಳು ಕೇವಲ ಲಾಭ ಗಳಿಸುವ ಉದ್ದೇಶಕ್ಕೆ ಸೀಮಿತವಾಗದೆ, ಸದಸ್ಯರ ಸರ್ವತೋಮುಖ ಅಭಿವೃದ್ಧಿಯೇ ಸಹಕಾರ ಸಂಸ್ಥೆಗಳ ಮೂಲ ಗುರಿಯಾಗಬೇಕೆಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕಿ ಡಾ.ಆರ್.ಎಸ್.ರೇಣುಕಾ ಹೇಳಿದರು.

ಅವರು ಶುಕ್ರವಾರ ತಾಲೂಕಿನ ಮಾಕೋನಹಳ್ಳಿಯಲ್ಲಿ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳ ಪಾತ್ರ ಕುರಿತ ಗೋಷ್ಠಿಯಲ್ಲಿ ಮಾತನಾಡಿದರು. ಸಹಕಾರ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸಹಕಾರ ಇಲಾಖೆಯು ಹೊಸ ತರಬೇತಿ ಆರಂಭಿಸಿದ್ದು, ಯುವಜನತೆ ಈ ಕ್ಷೇತ್ರದತ್ತ ಆಕರ್ಷಿತರಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕೃಷಿ ಕ್ಷೇತ್ರದಲ್ಲಿ ಸಾವಯವ ಕೃಷಿ ಹಾಗೂ ಹವಾಮಾನಕ್ಕೆ ಅನುಗುಣವಾದ ಕೃಷಿ ಪದ್ಧತಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಪ್ರಕೃತಿ ಸಂರಕ್ಷಣೆ, ಪ್ರಾಣಿ ಸಂಕುಲ ಮತ್ತು ಜೀವವೈವಿಧ್ಯದ ರಕ್ಷಣೆಯಲ್ಲಿಯೂ ಸಹಕಾರ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬೇಕೆಂದು ಹೇಳಿದರು.
ಸಹಕಾರ ಕ್ಷೇತ್ರದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಿಸುವುದರ ಜೊತೆಗೆ ಪರಿಸರ ಸ್ನೇಹಿ ತಂತ್ರಜ್ಞಾನ, ಗಿಡ ನೆಡುವಿಕೆ, ಜಲ ಸಂರಕ್ಷಣೆ, ಇಂಧನ ಉಳಿತಾಯ ಮತ್ತು ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಜಾತಿ, ಧರ್ಮ, ಭಾಷೆ ಭೇದ ಮರೆತು ಶಾಂತಿ, ಸಮಾನತೆ ಹಾಗೂ ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವ ಮೂಲಕ ಸಹಕಾರ ಸಂಸ್ಥೆಗಳು ಸಾಮಾಜಿಕ ಪರಿವರ್ತನೆಯ ಕೇಂದ್ರಗಳಾಗಬೇಕು. ಸಹಕಾರ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ, ಸಮಾನ ಪ್ರಾತಿನಿಧ್ಯ ಹಾಗೂ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಬೇಕೆಂದು ಹೇಳಿದರು.
