ಚನ್ನರಾಯಪಟ್ಟಣ: ರಾಜ್ಯಾದ್ಯಂತ ಹಲವೆಡೆ ವರುಣನ ಆರ್ಭಟ ಜೋರಾಗಿದ್ದು, ಸಾಕಷ್ಟು ಕಡೆ ಅನಾಹುತಗಳು ಸಂಭವಿಸುತ್ತಿವೆ. ಇನ್ನು ಮಳೆಯ ಅಬ್ಬರಕ್ಕೆ ಕಾರೊಂದು ಅಪಘಾತಕ್ಕೀಡಾಗಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಬಳಿ ಸಂಭವಿಸಿದೆ. ಬೆಂಗಳೂರು -ಮಂಗಳೂರು ರಾಷ್ಟೀಯ ಹೆದ್ದಾರಿ 75 ರಲ್ಲಿ ಸಂಚರಿಸುತ್ತಿದ್ದ ಇನ್ನೋವಾ ಕಾರು ಭಾರೀ ಮಳೆ ಬರ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಕುಣಿಗಲ್ ಮೂಲದ ವ್ಯಕ್ತಿಗೆ ಸೇರಿದ ಕಾರು ಇದಾಗಿದ್ದು, ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಇನ್ನೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳಕ್ಕೆ ಆಂಬ್ಯುಲೆನ್ಸ್ ಧಾವಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.