Monday, August 4, 2025
!-- afp header code starts here -->
Homebig breakingದೇವದಾಸಿ ಪದ್ಧತಿ ಆಚರಣೆ ಕಂಡುಬಂದರೆ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿ.ಎಂ ಎಚ್ಚರಿಕೆ

ದೇವದಾಸಿ ಪದ್ಧತಿ ಆಚರಣೆ ಕಂಡುಬಂದರೆ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ವಿರುದ್ಧ ಮುಲಾಜಿಲ್ಲದೆ ಕ್ರಮ: ಸಿ.ಎಂ ಎಚ್ಚರಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಕಾರ್ಯವೈಖರಿ ಸಂಬಂಧ ಎಚ್ಚರಿಕೆ ನೀಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಸಿಎಂ ಹೇಳಿದರು.
ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್‌ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚಿಸಿದರು.
ಬ್ಯಾಕ್‌ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಸಭೆಯ ಗಮನಕ್ಕೆ ತಂದರು.
ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಟ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ Review ಮೀಟಿಂಗ್ ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.
ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ ಎಚ್ಚರಿಸಿದರು.
ರಾಯಚೂರಿನ‌ ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಕ್ರಿಯಾ ಸಮಿತಿ ಅಡಿಯಲ್ಲಿ ನಡೆಯುತ್ತಿರುವ ಮಹಿಳೆಯರ ಅಹೋರಾತ್ರಿ ಧರಣಿ ವಿಚಾರವನ್ನು ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಪ್ರಸ್ತಾಪಿಸಿದರು. ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು, ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿ ಗತಿ ಬಗ್ಗೆ ಸಮೀಕ್ಷೆ ನಡೆಸಬೇಕು ಎನ್ನುವುದು ಪ್ರತಿಭಟನಾ ನಿರತರ ಬೇಡಿಕೆಯಾಗಿದೆ ಎಂದು ಉಲ್ಲೇಖಿಸಿದ ಮುಖ್ಯಮಂತ್ರಿಗಳು ದೇವದಾಸಿಯರ ಪುನರ್ವಸತಿ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಕೇಳಿದರು. ಈ ಬಗ್ಗೆ ಕೆಲ ಹೊತ್ತು ಚರ್ಚೆ ನಡೆದ ಬಳಿಕ ದೇವದಾಸಿ ಸಮಸ್ಯೆ ಮತ್ತು ಪುನರ್ವಸತಿ ಬಗ್ಗೆ ಸಮಗ್ರ ವರದಿ ಸಿದ್ದಪಡಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು
ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಸೂಚಿಸಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!