ಬೆಂಗಳೂರು : ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಪ್ರಕರಣಗಳು ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಸಂಸ್ಥೆಗಳ ಕಿರುಕುಳದಿಂದ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಂಡು ಪ್ರಾಣಕಳೆದುಕೊಂಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಲವು ಕುಟುಂಬಗಳು ಮನೆ ಬಿಟ್ಟು ಬೇರೆ ಕಡೆ ತೆರಳಿವೆ.
ಇಷ್ಟೆಲ್ಲಾ ಆಗುತ್ತಿದ್ರೂ ಫೈನಾನ್ಸ್ ಕಿರುಕುಳ ಮಾತ್ರ ಕಡಿಮೆಯಾಗುತ್ತಿಲ್ಲ. ದಿನನಿತ್ಯ ಒಂದಿಲ್ಲೊಂದು ಕಡೆ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸರ್ಕಾರ ಕೂಡಾ ಎಚ್ಚೆತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಬಂಧಿಸಿದ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.
ಜನವರಿ ೨೫ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ ೧೧ ಗಂಟೆಗೆ ಸಭೆ ಆಯೋಜಿಸಲಾಗಿದೆ. ಸಭೆಯಲ್ಲಿ ಡಿಸಿಎಂ, ಗೃಹ ಸಚಿವರು, ಕಂದಾಯ ಸಚಿವರು, ಸಹಕಾರ ಸಚಿವರು, ಸರ್ಕಾರದ ಉನ್ನತ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸರ್ಕಾರ ಈ ವಿಚಾರವಾಗಿ ಯಾವ ತೀರ್ಮಾನ ಕೈಗೊಳ್ಳುತ್ತೆ ಎಂಬ ಕುತೂಹಲ ಮೂಡಿದೆ.
