ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನ ಹೊಂದಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರಿಂದ ಸಂತಾಪ ವ್ಯಕ್ತವಾಗಿದೆ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
