ರಾಯಚೂರು : ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.
ಮಾನ್ವಿ ಹೊರ ವಲಯದ ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೂವರು ಮಕ್ಕಳ ಕಾಲು ಮುರಿತಕ್ಕೊಳಗಾಗಿದೆ. ಇನ್ನೂ ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಮಾಹಿತಿ ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ಪರಿಹಾರ ನೀಡಲು ಸೂಚಿಸಿದ್ದಾರೆ. ಕೆಎಸ್ಆರ್ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 3 ಲಕ್ಷ ರೂ ಪರಿಹಾರ ನೀಡಲಾಗುವುದು. ವಿದ್ಯಾರ್ಥಿಗಳ ಚಿಕಿತ್ಸೆಗೆ ಅಗತ್ಯ ಬಿದ್ದರೆ ಬೇರೆಡೆ ಸ್ಥಳಾಂತರಕ್ಕೆ ಸಿಎಂ ಸೂಚನೆ ನೀಡಿದ್ದಾರೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಪ್ರತಿಕ್ರಿಯಿಸಿದ್ದಾರೆ.




