ಬೆಂಗಳೂರು : ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40ಕ್ಕೂ ಹೆಚ್ಚು ಮುಖಂಡರು, ವಕೀಲರು ಉಪಸ್ಥಿತರಿದ್ದರು.
ಸಭೆಯಲ್ಲಿ ಚರ್ಚಿತವಾದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.

•ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
- ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.


ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು. ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು. ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.
ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ವಿವರಿಸಿದರು.
ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು. ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.




