ಬೆಂಗಳೂರು : ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಂಬಂಧ ಸರ್ಕಾರ ಮಹತ್ವದ ಆದೇಶ ಪ್ರಕಟಿಸಿದೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿ ತಡೆಯುವ ನಿಟ್ಟಿನಲ್ಲಿ ಈ ಮಹತ್ವದ ಆದೇಶನ್ನು ಸರ್ಕಾರ ಹೊರಡಿಸಿದೆ. ಸರ್ಕಾರಿ ಕಚೇರಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳನ್ನು ಬಳಸುವಂತಿಲ್ಲ ಅಂತ ಸರ್ಕಾರ ಹೇಳಿದೆ.
ಆದೇಶದಲ್ಲೇನಿದೆ?
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವವುಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಏಕಬಳಕೆ ಪ್ರಾಸ್ಟಿಕ್ ಬಾಟಲ್ ಬಳಕೆ ಸಂಬಂಧ ಕಳೆದ ವರ್ಷವೇ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದು ಪಾಲನೆಯಾಗುತ್ತಿರಲಿಲ್ಲ. ಹೀಗಾಗಿ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೊಮ್ಮೆ ಸೂಚನೆ ನೀಡಲಾಗುತ್ತಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.