ತುಮಕೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ. ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದರು.
ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.
ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ : ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ, ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು. ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು, ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ, ಸವಾಲು ಎರಡೂ ಆಗಿದೆ ಎಂದರು.
ಕೆಲವೇ ದಿನದಲ್ಲಿ ಬಸ್ ಪಾಸ್
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ. ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನು 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರು, ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಪತ್ರಕರ್ತರ 39ನೇ ರಾಜ್ಯ ಸಮ್ಮೇಳನ – ಪತ್ರಕರ್ತರಿಗೆ ಸಿಎಂ ಹೇಳಿದ ಕಿವಿಮಾತು ಏನು ಗೊತ್ತಾ..?
RELATED ARTICLES
