Friday, March 27, 2026
Homeಜಿಲ್ಲಾಸುದ್ದಿಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ದುರ್ಮರಣ

ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದ ಬಳಿ ಇರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅಕ್ಷಯ್ ತೋಪಡೆ (45), ದೀಪಕ್ ಮುನವಳ್ಳಿ (31) ಮತ್ತು ಸುದರ್ಶನ ಬನೋಶಿ (25) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ದುರ್ಘಟನೆಯಲ್ಲಿ ಐವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಕಾರ್ಖಾನೆಯ ಒಂದನೇ ಕಂಪಾರ್ಟ್‌ಮೆಂಟ್‌ನಲ್ಲಿ ವಾಲ್ವ್ ರಿಪೇರಿ ಮಾಡುವ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ಬಿಸಿಯಾದ ದ್ರವ ಮೈಮೇಲೆ ಬಿದ್ದಿದ್ದು, ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರು ಕಾರ್ಮಿಕರು ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಎಸ್ಪಿ ಕೆ. ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಬೈಲಹೊಂಗಲದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಿಲಾಗಿದೆ.

ಈ ದುರಂತಕ್ಕೆ ಕಾರ್ಖಾನೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಮೃತರ ಕುಟುಂಬಸ್ಥರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯಲ್ಲಿ ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಫೋಟಕ್ಕೆ ನಿಖರವಾದ ತಾಂತ್ರಿಕ ಕಾರಣವೇನು ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಕಾರ್ಖಾನೆಯ ಸುರಕ್ಷತಾ ಪ್ರಮಾಣಪತ್ರಗಳ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!