ಚಿಕ್ಕಮಗಳೂರು: ನಗರದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವು ಕರಕೌಶಲದೊಂದಿಗೆ ಅನಾವರಣಗೊಳ್ಳುತ್ತಿದ್ದು, ವರ್ಷದಿಂದ ವರ್ಷಕ್ಕೆ ಹೆಚ್ಚೆಚ್ಚು ಜನಮನ ಆಕರ್ಷಿಸುತ್ತಿದೆ. ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತವಾಗಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರು ಶ್ಲಾಘಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಚಿಕ್ಕಮಗಳೂರು ಉದ್ಯಾನ ಕಲಾಸಂಘ, ಕೆಎಪಿಪಿಇಸಿ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ಬೆಳಿಗ್ಗೆ ಗಣರಾಜ್ಯೋತ್ಸವ ಅಂಗವಾಗಿ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನ-೨೦೨೬ ಅನ್ನು ಟೇಪು ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತೀ ವರ್ಷವೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ತೋಟಗಾರಿಕೆ ಜಂಟಿ ನಿರ್ದೇಶಕರು ಅತ್ಯಂತ ಆಸಕ್ತಿಯಿಂದ ಕಾರ್ಯ ನಿರ್ವಹಿಸಿ ಇದನ್ನು ಯಶಸ್ವಿಗೊಳಿಸುತ್ತಿದ್ದು, ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಅವರು ಮಾತನಾಡಿ, ಈ ಬಾರಿ ಆಯೋಜಿಸಿರುವ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನವನ್ನು ದಾನಿಗಳು, ಸಂಘ-ಸಂಸ್ಥೆಗಳ ನೆರವಿನಿಂದ ಆಯೋಜಿಸಲಾಗಿದೆ. ಕಳೆದ ಬಾರಿ ಮೂರು ಲಕ್ಷ ಜನರು ಈ ಪ್ರದರ್ಶನವನ್ನು ವೀಕ್ಷಿಸಿದ್ದು, ಈ ಬಾರಿ ಹತ್ತು ಲಕ್ಷ ಜನರು ವೀಕ್ಷಿಸುವ ನಿರೀಕ್ಷೆ ಇದೆ. ಈ ಪ್ರದರ್ಶನದಲ್ಲಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಬಳಿಗೆ ತೆರಳಿ ವಿಶೇಷ ಅನುದಾನ ಪಡೆದು ಮುಂದಿನ ವರ್ಷದಿಂದ ಚೈತ್ರೋತ್ಸವ ಫಲಪುಷ್ಪ ಪ್ರದರ್ಶನವನ್ನು ಮಲೆನಾಡು ಉತ್ಸವವೆಂದು ಇನ್ನಷ್ಟು ವ್ಯವಸ್ಥಿತವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು. ಅದರಲ್ಲಿ ನಮ್ಮ ಜಿಲ್ಲೆಯ ಸಂಸ್ಕೃತಿ, ಕಲೆ ಇತ್ಯಾದಿಗಳನ್ನು ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭೆ ಅಧ್ಯಕ್ಷೆ ಬಿ.ಶೀಲಾ ದಿನೇಶ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ತೋಟಗಾರಿಕೆ ಜಂಟಿ ನಿರ್ದೇಶಕಿ ಮಂಗಳ ಮತ್ತಿತರ ಅಧಿಕಾರಿಗಳು ಇದ್ದರು.
