ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಜಿಲ್ಲಾ ಮಟ್ಟದ ಕುಂದುಕೊರತೆ ಸಭೆಯು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕ ಶ್ರೀ ಜಿತೇಂದ್ರ ಕುಮಾರ್ ದಯಾಮ (IPS) ಅವರ ನೇತೃತ್ವದಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಡಿ.ಸಿ.ಆರ್.ಇ (DCRE) ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖರು ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ದಲಿತ ಮುಖಂಡರು ತಮ್ಮ ಭಾಗದ ಮೂಲಭೂತ ಸೌಕರ್ಯಗಳ ಕೊರತೆ, ಸಾಮಾಜಿಕ ಸಮಸ್ಯೆಗಳು ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹಲವು ಅಹವಾಲುಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದರು.
ಕಳೆದ ಸಭೆಯಲ್ಲಿ ಚರ್ಚಿಸಲಾದ ವಿಷಯಗಳ ಮೇಲೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಅವಲೋಕಿಸಲಾಯಿತು. ಸಾರ್ವಜನಿಕರು ಸಲ್ಲಿಸಿದ ಹೊಸ ಅರ್ಜಿಗಳಿಗೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆ ಮತ್ತು ಇತರ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ಶೀಘ್ರವಾಗಿ ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆಯನ್ನು ಎಸ್ಪಿ ಜಿತೇಂದ್ರ ಕುಮಾರ್ ಅವರು ನೀಡಿದರು. ಜಿಲ್ಲೆಯಲ್ಲಿ ಸಾಮಾಜಿಕ ನ್ಯಾಯ ಮತ್ತು ಶಾಂತಿ ಕಾಪಾಡುವಲ್ಲಿ ಮುಖಂಡರ ಸಹಕಾರ ಅತ್ಯಗತ್ಯ ಎಂದು ಅವರು ಇದೇ ವೇಳೆ ತಿಳಿಸಿದರು.
