Friday, February 13, 2026
Homeಜಿಲ್ಲಾಸುದ್ದಿCKM: ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು, ಮಣ್ಣಿನ ಮೂರ್ತಿಗಳನ್ನೇ ಪೂಜಿಸಿ: ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್...

CKM: ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು, ಮಣ್ಣಿನ ಮೂರ್ತಿಗಳನ್ನೇ ಪೂಜಿಸಿ: ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮನವಿ!

ಚಿಕ್ಕಮಗಳೂರು:  ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು, ಮಣ್ಣಿನ ಮೂರ್ತಿಗಳನ್ನೇ ಪೂಜಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಆಯುಕ್ತರು ಮತ್ತು ಸಿಬ್ಬಂದಿಗಳೊಂದಿಗೆ ಗುರುವಾರ ನಗರದ ಬಸವನ ಹಳ್ಳಿ ಕುಂಬಾರ ಬೀದಿ ಬಡಾವಣೆಯ ಗಣೇಶನ ಮೂರ್ತಿಗಳನ್ನು ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ನಗರದ ಕೋಟೆ ಕೆರೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಪ್ರತ್ಯೇಕ ವ್ಯವಸ್ಥೆಗಳನ್ನು ನಗರಸಭೆ ವತಿಯಿಂದ ಮಾಡಲಾಗಿದೆ. ಹೂವು ಮತ್ತು ಪೂಜಾ ಸಾಮಾಗ್ರಿಗಳನ್ನು ನೀರಿಗೆ ಬಿಡಬಾರದು ಅದನ್ನು ಪ್ರತ್ಯೇಕವಾಗಿ ಸಂಗ್ರಹಿಸಲು ಸಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ನಗರಸಭೆ ಆಯುಕ್ತ ಬಿ.ಸಿ.ಬಸವರಾಜು ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಪರಿಶೀಲನೆ ವೇಳೆ ಯಾರೂ ಸಹ ಪಿಓಪಿ ಮೂರ್ತಿಗಳನ್ನು ತಯಾರಿಸುವುದಾಗಲಿ, ಬಳಸುವುದಾಗಲಿ ಕಂಡುಬಂದಿಲ್ಲ. ಈ ಹಿಂದೆಯೂ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ಮಣ್ಣಿನಿಂದಲೇ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಇದು ಖುಷಿಯ ವಿಚಾರ ಎಂದರು.

ನಗರದ ಕೊಟೆ ಕೆರೆಯಲ್ಲಿ ಗಣಪತಿಗಳನ್ನು ವಿಸರ್ಜಿಸಲು ಕಲ್ಯಾಣಿಯೊಂದನ್ನು ನಿರ್ಮಾಣ ಮಾಡಲಾಗಿದೆ. ಸಾರ್ವಜನಿಕರು ಅಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ಬೇರೆ, ಕರೆ ಕಟ್ಟೆಗಳಲ್ಲಿ ವಿಸರ್ಜಿಸಬಾರದು ಎಂದು ತಿಳಿಸಿದರು.

ಗಣೇಶೋತ್ಸವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈಗಾಗಲೇ ೨ ಸಭೆಗಳನ್ನು ನಡೆಸಲಾಗಿದೆ. ಹೊರ ಜಿಲ್ಲೆಗಳಿಂದ ಪಿಓಪಿ ಗಣೇಶ ಮೂರ್ತಿಗಳನ್ನು ತರಿಸಬಾರದು ಎನ್ನುವ ಉದ್ದೇಶದಿಂದ ಜಿಲ್ಲೆ ಮತ್ತು ತಾಲ್ಲೂಕಿನ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಾಣ ಮಾಡಿ ಪೊಲೀಸರನ್ನು ನೇಮಿಸಿ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಮೀರಿ ಪಿಓಪಿ ಮೂರ್ತಿಗಳನ್ನು ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ. ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿರುತ್ತದೆ. ಇದಕ್ಕಾಗಿ ನಗರಸಭೆಯಲ್ಲಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೇ ಎಲ್ಲಾ ಇಲಾಖೆಗೆ ಸಂಬಂಧಿಸಿದ ಪರವಾನಗಿಯನ್ನು ಪಡೆಯಬಹುದು ಎಂದು ತಿಳಿಸಿದರು.

ನಗರಸಭಾ ಸದಸ್ಯ ಎ.ಸಿ.ಕುಮಾರ್ ಮಾತನಾಡಿ, ನಗರಸಭೆ ಪ್ಲಾಸ್ಟಿಕ್ ಮುಕ್ತ ಮತ್ತು ಕಸ ಮುಕ್ತ ನಗರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶನನ್ನು ಪೂಜಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷರಾದ ನಾಗಪ್ಪ, ರಂಗಪ್ಪ, ಈಶ್ವರ್, ವೆಂಕಟೇಶ್, ಅಣ್ಣಯ್ಯ ಮತ್ತು ಸಿಬ್ಬಂದಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!