ಚಿಕ್ಕಮಗಳೂರು/ ಬೆಂಗಳೂರು: ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಎಂದು ವಿವಾದಾತ್ಮಕ ಹೇಳಿಕೆ ಆರೋಪ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣವು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಈ ಮಧ್ಯೆ ಎಫ್‌ಐಆರ್‌ಗೆ ತಡೆ ಕೋರಿ ಸಿಟಿ ರವಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇತ್ತ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿಟಿ ರವಿ ಪರ ವಕೀಲರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಲಾಗಿದೆ.
ಜಾಮಿಯಾ ಮಸೀದಿ ಸಮಿತಿಯ ಅಧ್ಯಕ್ಷ ಮುದಾಸಿರ್ ನೀಡಿದ ದೂರಿನ ಆಧಾರದ ಮೇಲೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಈಗಾಗಲೇ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಬಳಿಕ ಸಿ.ಟಿ. ರವಿ ಅವರ ನಿವಾಸಕ್ಕೂ ತನಿಖಾಧಿಕಾರಿ ಹಾಗೂ ನಗರ ಠಾಣೆ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ನೋಟಿಸ್ ಅಂಟಿಸಿದ್ದರು.
ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ನಡೆದ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ್ದ ಸಿಟಿ ರವಿ, ‘ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಮುಲ್ಲಾಗಳ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ಅವರು ಬಂದು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದರೆ ಅದರ ಅರ್ಥವೇನು? ಎಂದು ಹೇಳಿಕೆ ನೀಡಿದ್ದರು.
