ಚಿಕ್ಕಮಗಳೂರು: ನರಸಿಂಹರಾಜಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷ್ಣಮೂರ್ತಿ ಎಂಬವರು ಮೃತಪಟ್ಟಿರುವ ಘಟನೆ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದನ ಹುಡುಕಲು ತೋಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳ ಹಿಂದಷ್ಟೇ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲೂ ಮತ್ತೊಂದು ಜೀವ ಬಲಿಯಾಗಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ.
ಜಿಲ್ಲೆಯಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ರೈತರು, ಕೃಷಿ ಕಾರ್ಮಿಕರು ಹಾಗೂ ಕಾಡಂಚಿನ ಗ್ರಾಮಗಳ ಜನರು ಪ್ರತಿನಿತ್ಯ ತಮ್ಮ ಕೃಷಿ ಚಟುವಟಿಕೆಗಳಿಗೆ ತೋಟಗಳಿಗೆ ತೆರಳಲು ಜೀವಭಯದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೊಂದು ಸಾವು-ನೋವುಗಳು ಸಂಭವಿಸುತ್ತಿದ್ದರೂ ಸರ್ಕಾರ ಮತ್ತು ಅರಣ್ಯ ಇಲಾಖೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ.
ಕೂಡಲೇ ರಾಜ್ಯ ಸರ್ಕಾರ ಕಾಡಾನೆ ಸಮಸ್ಯೆಗೆ ವೈಜ್ಞಾನಿಕ ಹಾಗೂ ಶಾಶ್ವತ ಪರಿಹಾರ ರೂಪಿಸಿ, ಕಾಡಂಚಿನ ಗ್ರಾಮಗಳಿಗೆ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸಬೇಕು. ಮೃತ ಕೃಷ್ಣಮೂರ್ತಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಜನರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಬೇಕಿದ್ದು, ಚಿಕ್ಕಮಗಳೂರು ಜಿಲ್ಲೆಯ ಜನರ ಸುರಕ್ಷತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದಾರೆ.
