ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಳಬೈಲ್ ಗ್ರಾಮದಲ್ಲಿ ನಡೆದಿದೆ.
ಬೃಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ರಭಸಕ್ಕೆ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ಈ ವೇಳೆ ಆ ಮಾರ್ಗದಲ್ಲಿ ಸಾಗುತ್ತಿದ್ದ ಮೂರು ಹಸುಗಳಿಗೆ ತಂತಿ ಸ್ಪರ್ಶಿಸಿ, ತೀವ್ರವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅವು ಸ್ಥಳದಲ್ಲೇ ಪ್ರಾಣ ಬಿಟ್ಟಿವೆ.
ದುರ್ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ತೆರಳಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.ಅಪಾಯಕಾರಿ ಮರಗಳನ್ನು ಮುಂಚಿತವಾಗಿ ತೆರವುಗೊಳಿಸದ ಇಲಾಖೆಯ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಸಂತ್ರಸ್ತ ರೈತನಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
