ಕೊಟ್ಟಿಗೆಹಾರ: ದಕ್ಷಿಣ ಕನ್ನಡ–ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಅಗ್ನಿ ಅವಘಡ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.
ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸುತ್ತಿದ್ದು, ಅರಣ್ಯ ಸಂಪತ್ತಿಗೆ ಅಪಾರ ಹಾನಿ ಉಂಟಾಗುವ ಭೀತಿ ಎದುರಾಗಿದೆ. ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ವಾಹನ ಸವಾರರು ಹಾಗೂ ಪ್ರವಾಸಿಗರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ತನಿಖೆ ಆರಂಭಿಸಿದೆ. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅರಣ್ಯ ಪ್ರದೇಶದ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಈ ಬೆಂಕಿ ತೀವ್ರ ಹೊಡೆತ ನೀಡಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ನಿಗಾ ವಹಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
