ಹಾಸನ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಕೆಲ ಅನಾಹುತಗಳು ಸಂಭವಿಸಿವೆ. ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನಲ್ಲಿದ್ದವರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲುವಿನ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಗುಡ್ಡದ ಮಣ್ಣು ಕುಸಿದಿದೆ. ಕಾರು ಬಹುತೇಕ ಮಣ್ಣಿನಡಿ ಮುಚ್ಚಿಹೋಗಿದ್ರೂ ಕಾರಿನಲ್ಲಿದ್ದವರು ಬದುಕುಳಿದದ್ದೇ ಅಚ್ಚರಿಯ ಸಂಗತಿ. ಘಟನೆಯಿಂದ ರಸ್ತೆಯ ಎರಡು ಕಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

ಹಾಸನ ಜಿಲ್ಲೆಯ ಹಲವೆಡೆ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಲ್ಲಿ ಭೂಕುಸಿತವುಂಟಾಗಿ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಹಲವೆಡೆ ಮನೆಗಳಿಗೆ ಹಾನಿಯುಂಟಾಗಿದೆ. ಮಳೆರಾಯ ಸ್ವಲ್ಪ ಬಿಡುವು ಕೊಡಲೆಂದು ಜನ ಬೇಡಿಕೊಳ್ಳುವಂತಾಗಿದೆ.