ಮೂಡಿಗೆರೆ: ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದ್ದ ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ₹2.5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಪರಿಹಾರ ದೊರೆತಂತಾಗಿದೆ.
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಅವರು ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ಸಚಿವರು ₹2.5 ಕೋಟಿ ಅನುದಾನ ಒದಗಿಸುವ ಮೂಲಕ ರಸ್ತೆ ಅಭಿವೃದ್ಧಿಗೆ ಸಹಕರಿಸಿದ್ದರು.
ಸೋಮವಾರ ಖಾಸಗಿ ಭೇಟಿಗಾಗಿ ಮೂಡಿಗೆರೆ ಭಾಗಕ್ಕೆ ಆಗಮಿಸಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮತ್ತಿಕಟ್ಟೆ–ಬಿ. ಹೊಸಹಳ್ಳಿ ಸಂಪರ್ಕ ರಸ್ತೆಗೆ ಕರೆತರಲಾಯಿತು. ಈ ವೇಳೆ ಪೂರ್ಣಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಕುರಿತು ಅವರಿಗೆ ಮಾಹಿತಿ ನೀಡಲಾಯಿತು. ರಸ್ತೆ ವೀಕ್ಷಿಸಿದ ಸಚಿವರು ಕಾಮಗಾರಿಯ ಬಗ್ಗೆ ಹರ್ಷ ವ್ಯಕ್ತಪಡಿಸಿ ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿ. ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಆರ್ಶಿತ್ ಗೌಡ ಅವರು ಸಚಿವರೊಂದಿಗೆ ಉಪಸ್ಥಿತರಿದ್ದು, ಅಭಿವೃದ್ಧಿಗೊಂಡ ರಸ್ತೆಯನ್ನು ವೀಕ್ಷಿಸಿದರು.
