Thursday, November 19, 2026
Homeಜಿಲ್ಲಾಸುದ್ದಿಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಪ್ರಗತಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯ: ಸಿ....

ಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಪ್ರಗತಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯ: ಸಿ. ಟಿ. ರವಿ

Telegram Group
Join Now

ಮೂಡಿಗೆರೆ: ಸಮಾಜದ ಸರ್ವಾಂಗೀಣ ಅಭಿವೃದ್ಧಿ ಹಾಗೂ ರೈತರ ಆರ್ಥಿಕ ಪ್ರಗತಿಗೆ ಸಹಕಾರಿ ತತ್ವವೇ ಪ್ರಮುಖ ಅಡಿಪಾಯವಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಟಿ. ರವಿ ಹೇಳಿದರು.

ಅವರು ಗುರುವಾರ ಪಟ್ಟಣದ ಟಿಎಪಿಸಿಎಂಎಸ್ (ಕೃಷಿ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘ) ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ, ಬಳಿಕ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರದಿಂದ ಸಮೃದ್ಧಿ ಆಶಯದಂತೆ ಕೇಂದ್ರ ಸರಕಾರ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಅಮಿತ್ ಶಾ ಅವರ ನೇತೃತ್ವದಲ್ಲಿ ಸಹಕಾರಿ ಕ್ಷೇತ್ರವನ್ನು ದೇಶಾದ್ಯಂತ ಬಲಪಡಿಸುವ ಕಾರ್ಯ ನಡೆಯುತ್ತಿದೆ. ಸಹಕಾರಿ ತತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಸಮಾಜದ ಪ್ರತಿಯೊಬ್ಬರ ಅಭಿವೃದ್ಧಿಗೂ ಸಹಕಾರ ಮನೋಭಾವ ಅತ್ಯಗತ್ಯವಾಗಿದೆ ಎಂದರು.

113 ವರ್ಷದ ಹಿಂದೆ ಮಾಕೋನಹಳ್ಳಿ ಸಿದ್ದೇಗೌಡ ಹಾಗೂ ಕಡುವಳ್ಳಿ ಹುಚ್ಚೇಗೌಡರು ಸ್ಥಾಪಿಸಿದ ಸಂಸ್ಥೆ ಇಂದಿಗೂ ಉತ್ತಮವಾಗಿ ಮುನ್ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಸಂಸ್ಥೆಯ ಬೆಳವಣಿಗೆಯಲ್ಲಿ ಹಿಂದಿನ ಅಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿಯ ಪರಿಶ್ರಮ ಮಹತ್ವದ್ದಾಗಿದೆ. ಮೂಡಿಗೆರೆ ಟಿಎಪಿಸಿಎಂಎಸ್ ರೈತ ಸ್ನೇಹಿ ಸಂಸ್ಥೆಯಾಗಿ ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಸಹಕಾರಿ ತತ್ವದ ಉದ್ದೇಶ ಈಡೇರಲು ಸಾಧ್ಯವಾಗುತ್ತದೆ. ನೂತನ ಕಟ್ಟಡದಲ್ಲಿ ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಬೇಕು. ಪ್ರಸ್ತುತ ಬರಗಾಲದ ಪರಿಸ್ಥಿತಿಯಲ್ಲಿ ರೈತರ ಹಿತದೃಷ್ಟಿಯಿಂದ ಡಿಸಿಸಿ ಬ್ಯಾಂಕ್ ವತಿಯಿಂದಲೂ ಅಗತ್ಯ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಮಾಜಿ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಮಾತನಾಡಿ, 1913ರಲ್ಲಿ ಆರಂಭಗೊಂಡ ಸಂಸ್ಥೆ ಇಂದಿಗೂ ತನ್ನ ಅಸ್ತಿತ್ವ ಮತ್ತು ಗೌರವವನ್ನು ಉಳಿಸಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ. ಇದಕ್ಕೆ ಹಿಂದಿನ ಅಧ್ಯಕ್ಷರು ಹಾಗೂ ನಿರ್ದೇಶಕರ ಸೇವೆ ಕಾರಣವಾಗಿದೆ. ಬರಗಾಲ ಸೇರಿದಂತೆ ಸಂಕಷ್ಟದ ಸಂದರ್ಭಗಳಲ್ಲಿ ರೈತರೇ ಹೆಚ್ಚು ತೊಂದರೆ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ, ಹಣವನ್ನು ಮಿತವಾಗಿ ಬಳಸುವ ಮೂಲಕ ಸಹಕಾರ ತತ್ವದಡಿ ಪರಸ್ಪರ ನೆರವಾಗಿ ಬದುಕಬೇಕೆಂದು ಹೇಳಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಲ್.ಕಲ್ಲೇಶ್ ಮಾತನಾಡಿ, ಸುಮಾರು 2.65 ಕೋಟಿ ರೂ. ವೆಚ್ಚದಲ್ಲಿ ನೂತನ ಆಡಳಿತ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. ಈ ಕಟ್ಟಡ ರೈತರು, ಷೇರುದಾರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಕೃಷಿ ಉತ್ಪನ್ನಗಳ ಮಾರಾಟಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಟಿಎಪಿಸಿಎಂಎಸ್ ಉಪಾಧ್ಯಕ್ಷ ಕೆ.ಬಿ.ಗಣೇಶ್, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ರಾಜ್ಯ ಸರಕಾರಿ ಯೂನಿಯನ್ ನಿರ್ದೇಶಕ ಲೋಕಪ್ಪಗೌಡ ಸೇರಿದಂತೆ ಸಂಘದ ನಿರ್ದೇಶಕರು, ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!