ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿಗಳ ಹಣಕಾಸಿನ ವ್ಯವಹಾರ ಹಾಗೂ ಭ್ರಷ್ಟಾಚಾರದ ಗಂಭೀರ ಆರೋಪಗಳ ಕುರಿತು ಸಮಗ್ರ ಮತ್ತು ಸ್ವತಂತ್ರ ತನಿಖೆ ನಡೆಸುವಂತೆ ಆಗ್ರಹಿಸಿ, ಜೆಡಿಎಸ್ ಶಾಸಕರ ನಿಯೋಗವು ಇಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ವಿವರವಾದ ದೂರು ಸಲ್ಲಿಸಿತು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಚಿಕ್ಕನಾಯಕನಹಳ್ಳಿ ಶಾಸಕರಾದ ಸಿ.ಬಿ. ಸುರೇಶ್ ಬಾಬು, ಶಾಸಕರು, ಕರ್ನಾಟಕ ವಿಧಾನ ಪರಿಷತ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ. ಶರವಣ ಮತ್ತು ಶಾಸಕರಾದ ರಾಜುಗೌಡ ಪಾಟೀಲ್ ಅವರು ನಿಯೋಗದಲ್ಲಿದ್ದು, ಪ್ರಕರಣದ ಗಂಭೀರತೆಯನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಸಾರ್ವಜನಿಕವಾಗಿ ಬಿಡುಗಡೆಯಾಗಿರುವ WhatsApp ಸಂಭಾಷಣೆಗಳ ಸ್ಕ್ರೀನ್ಶಾಟ್ಗಳಲ್ಲಿ ಹಾಸನ ಜಿಲ್ಲಾಧಿಕಾರಿ (DC), ಉಪವಿಭಾಗಾಧಿಕಾರಿ (AC), ಅಪರ ಜಿಲ್ಲಾಧಿಕಾರಿ (ADC), ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ (DC PA) ಸೇರಿದಂತೆ ವಿವಿಧ ಅಧಿಕಾರಿಗಳ ಹುದ್ದೆಗಳನ್ನು ಉಲ್ಲೇಖಿಸಿ ಕೋಟ್ಯಂತರ ರೂಪಾಯಿಗಳ ಹಣಕಾಸಿನ ವ್ಯವಹಾರ, ಹಣದ ಹಂಚಿಕೆ ಮತ್ತು ಹೊಂದಾಣಿಕೆ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ.
ವಿಶೇಷವಾಗಿ, ಜಿಲ್ಲಾಧಿಕಾರಿಗಳಿಗೆ ಸಂಬಂಧಿಸಿದಂತೆ ₹50 ಲಕ್ಷ, ₹60 ಲಕ್ಷ ಹಾಗೂ ₹75 ಲಕ್ಷದವರೆಗಿನ ಮೊತ್ತಗಳ ಉಲ್ಲೇಖಗಳು ಹಾಗೂ ಉಪವಿಭಾಗಾಧಿಕಾರಿಗಳಿಗೆ ಸಂಬಂಧಿಸಿದಂತೆ ₹13 ಲಕ್ಷ ಮತ್ತು ₹20 ಲಕ್ಷಗಳ ಮೊತ್ತಗಳ ಪ್ರಸ್ತಾಪಗಳು ಸಂಭಾಷಣೆಗಳಲ್ಲಿ ಕಂಡುಬಂದಿವೆ. ಅಲ್ಲದೆ, ಸಕಲೇಶಪುರದ ಮೂರು ಕ್ರಷರ್ಗಳ ಕಡತಗಳ ಅನುಮೋದನೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿರುವ ಆರೋಪಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕೆಂದು ನಿಯೋಗ ಒತ್ತಾಯಿಸಿತು.
ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ಪಾತ್ರ, ಹಣಕಾಸಿನ ವಹಿವಾಟುಗಳ ಮೂಲ, ಬ್ಯಾಂಕ್ ಖಾತೆಗಳು, UPI ವ್ಯವಹಾರಗಳು ಹಾಗೂ ಇತರ ಹಣಕಾಸಿನ ದಾಖಲೆಗಳನ್ನು ಪರಿಶೀಲಿಸಬೇಕು. ಸಾರ್ವಜನಿಕವಾಗಿ ಬಿಡುಗಡೆಯಾಗಿರುವ WhatsApp ಸಂಭಾಷಣೆಗಳ ಸತ್ಯಾಸತ್ಯತೆಯನ್ನು ಮೂಲ ಮೊಬೈಲ್ ಸಾಧನಗಳು, ಡಿಜಿಟಲ್ ದಾಖಲೆಗಳು ಮತ್ತು ವಿಧಿವಿಜ್ಞಾನ (Forensic) ಪರೀಕ್ಷೆಯ ಮೂಲಕ ದೃಢಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರಕರಣವನ್ನು ಜಿಲ್ಲಾಡಳಿತದ ಆಂತರಿಕ ತನಿಖೆಗೆ ಸೀಮಿತಗೊಳಿಸದೆ, ಲೋಕಾಯುಕ್ತ ಅಥವಾ ಸಮರ್ಥ ಸ್ವತಂತ್ರ ತನಿಖಾ ಸಂಸ್ಥೆಯ ಮೂಲಕ ಉನ್ನತ ಮಟ್ಟದ ತನಿಖೆ ನಡೆಸಬೇಕು. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ, 1988 ಸೇರಿದಂತೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಅಪರಾಧದ ಅಂಶಗಳು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ತನಿಖೆಗೆ ಯಾವುದೇ ಅಡ್ಡಿಯಾಗದಂತೆ ಸಾಕ್ಷ್ಯಾಧಾರಗಳನ್ನು ಸಂರಕ್ಷಿಸಬೇಕು ಹಾಗೂ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ತನಿಖೆ ಪೂರ್ಣಗೊಳ್ಳುವವರೆಗೆ ಆಡಳಿತಾತ್ಮಕವಾಗಿ ಕರ್ತವ್ಯದಿಂದ ದೂರವಿಡುವ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿತು.
ಸರ್ಕಾರಿ ಅಧಿಕಾರಿಗಳ ಹುದ್ದೆಗಳನ್ನು ದುರುಪಯೋಗಪಡಿಸಿಕೊಂಡು ಹಣದ ವಸೂಲಿ ಹಾಗೂ ಸರ್ಕಾರಿ ಕಡತಗಳ ವಿಲೇವಾರಿಯಲ್ಲಿ ಅಕ್ರಮ ನಡೆದಿದೆಯೇ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿರುವಾಗ ಸರ್ಕಾರ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು. ಆರೋಪಗಳು ಸತ್ಯವೇ ಅಥವಾ ಸುಳ್ಳೇ ಎಂಬುದು ನಿಷ್ಪಕ್ಷಪಾತ ತನಿಖೆಯಿಂದ ಹೊರಬರಬೇಕು. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜನರ ವಿಶ್ವಾಸವನ್ನು ಎತ್ತಿಹಿಡಿಯುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಜೆಡಿಎಸ್ ಶಾಸಕರ ನಿಯೋಗ ಒತ್ತಾಯಿಸಿತು.
