ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಶಾಸಕ ಡಿ.ಎನ್.ಜೀವರಾಜ್ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಟಿ.ಡಿ.ರಾಜೇಗೌಡ ಅವರ ಚುನಾವಣಾ ಏಜೆಂಟ್ ಅಧಿಕಾರಿ ಸುಧೀರ್ ಕುಮಾರ್ ಮುರುಳ್ಳಿ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವರಾಜ್ ತಡೆಯಾಜ್ಞೆ ತಂದಿದ್ದರು. ಈಗ ಎರಡು ಕಡೆ ವಾದ ಆಲಿಸಿ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡಿದೆ.

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಡಿ.ಎನ್.ಜೀವರಾಜ್, ಚುನಾವಣಾ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು 2026ರ ಏಪ್ರಿಲ್ 6ರಂದು 279 ತಿರಸ್ಕೃತ ಅಂಚೆ ಮತಪತ್ರಗಳನ್ನು ಮರುಪರಿಶೀಲಿಸುವುದರ ಜೊತೆಗೆ ಎಲ್ಲ ಅಂಚೆ ಮತಪತ್ರಗಳನ್ನು ಮರು ಎಣಿಕೆ ಮಾಡುವಂತೆ ಆದೇಶಿಸಿತ್ತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಚುನಾವಣಾ ಮತ ಎಣಿಕೆಗೆ ಸಂಬಂಧಿಸಿದ ವಿಚಾರಗಳು ಈಗಾಗಲೇ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯದ ಪರಿಶೀಲನೆಗೆ ಒಳಪಟ್ಟಿದ್ದು, ನ್ಯಾಯಾಲಯದ ಆದೇಶದಂತೆ ಮರು ಎಣಿಕೆಯೂ ಪೂರ್ಣಗೊಂಡಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗಿದೆ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ನಿರ್ದಿಷ್ಟ ಆಧಾರಗಳಿಲ್ಲದೆ ಪ್ರಕರಣ ದಾಖಲಿಸಲಾಗಿದೆ. ಆದ್ದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು. ಇದಕ್ಕೆ ಪ್ರಾಸಿಕ್ಯೂಷನ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು.
ವಾದ, ಪ್ರತಿವಾದ ಆಲಿಸಿದ ನ್ಯಾಯಪೀಠ, ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಹಾಗೂ ಅದರ ಮುಂದುವರೆದ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಆದೇಶಿಸಿದೆ.
