ಧರ್ಮಸ್ಥಳದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವನ್ನು ಹೊಸದಾಗಿ ಮರುತನಿಖೆ ನಡೆಸುವಂತೆ ಸೂಚಿಸಿರುವ ನ್ಯಾಯಾಲಯ, ತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ, ಎಸ್‌ಐಟಿ ಮುಂದಿನ 3 ತಿಂಗಳ ಒಳಗಾಗಿ ಸಂಪೂರ್ಣ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಸಂತೋಷ್ ರಾವ್ ಅವರನ್ನು ಜೂನ್ 16, 2023 ರಂದು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತು. ತನಿಖೆಯಲ್ಲಿ ಗಂಭೀರವಾಗಿ ಲೋಪಗಳಾಗಿದ್ದು, ನಿಜವಾದ ಆರೋಪಿಗಳನ್ನು ರಕ್ಷಿಸಲಾಗಿದೆ. ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಿ ನ್ಯಾಯ ಒದಗಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
2012ರ ಅಕ್ಟೋಬರ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಅವರ ಅತ್ಯಾಚಾರ ಹಾಗೂ ಕ್ರೂರ ಹತ್ಯೆ ನಡೆಯಿತು. ಈ ಪ್ರಕರಣದಲ್ಲಿ ಸಂತೋಷ್ ರಾವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯವು 2023ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಂತೋಷ್ ರಾವ್ ಅವರನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು.
2024 ರಲ್ಲಿ, ಸೌಜನ್ಯ ತಾಯಿ ಕುಸುಮಾವತಿ ಹೊಸ ಸಿಬಿಐ ತನಿಖೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋದರು. ಆಗಸ್ಟ್ 20, 2024 ರಂದು, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತು ಆದರೆ ಈ ಆದೇಶದ ವಿರುದ್ಧ ಕುಸುಮವತಿ ಗೌಡ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
