ಬೆಂಗಳೂರು: ಬಾಗಲಕೋಟೆ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಕಲ್ಲುತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕೃತ್ಯವು ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕವಾಗಿದ್ದು, ಇಂತಹ ದುಷ್ಕೃತ್ಯಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ. ಘಟನೆಯ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿರುವ ಮುಖ್ಯಮಂತ್ರಿಗಳು, ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ.

ಘಟನೆಯ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, “ಬಾಗಲಕೋಟೆಯ ಘಟನೆಯನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಪುಂಡರಿಗೆ ಕಾನೂನಿನ ಮೂಲಕವೇ ತಕ್ಕ ಉತ್ತರ ನೀಡಬೇಕು ಎಂಬ ಸ್ಪಷ್ಟ ನಿರ್ದೇಶನವನ್ನು ಪೊಲೀಸ್ ಇಲಾಖೆಗೆ ನೀಡಿದ್ದೇನೆ” ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ತನಿಖೆಯನ್ನು ಚುರುಕುಗೊಳಿಸಿದ್ದು, ಕಲ್ಲುತೂರಾಟದಲ್ಲಿ ಭಾಗಿಯಾದ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ನೇರವಾಗಿ ಭಾಗಿಯಾದ ಪ್ರತಿಯೊಬ್ಬ ವ್ಯಕ್ತಿಯನ್ನು ಪತ್ತೆ ಹಚ್ಚಿ, ಕಾನೂನಿನ ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ಕೊಡಿಸುವುದು ನಿಶ್ಚಿತ ಎಂದು ಸರ್ಕಾರ ಭರವಸೆ ನೀಡಿದೆ. ಜಿಲ್ಲೆಯಲ್ಲಿ ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

“ನಾಡಿನ ಜನರಿಗೆ ಭಯಮುಕ್ತ ಮತ್ತು ನೆಮ್ಮದಿಯ ಬದುಕು ನೀಡುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ ಅಥವಾ ಶಕ್ತಿಯೇ ಆಗಿರಲಿ, ಅವರನ್ನು ನಾವು ನಿರ್ದಾಕ್ಷಿಣ್ಯವಾಗಿ ಮಟ್ಟಹಾಕುತ್ತೇವೆ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಮಾಜದಲ್ಲಿ ಅಶಾಂತಿ ಮೂಡಿಸುವ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ಗೃಹ ಇಲಾಖೆಗೆ ಮುಕ್ತ ಅಧಿಕಾರ ನೀಡಿದ್ದಾರೆ.
ಸಾರ್ವಜನಿಕರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿಗಳು, “ಯಾವುದೇ ರೀತಿಯ ಪ್ರಚೋದನಕಾರಿ ಮಾತುಗಳಿಗೆ ಅಥವಾ ವದಂತಿಗಳಿಗೆ ಕಿವಿಗೊಡಬೇಡಿ. ಸಂಯಮದಿಂದ ವರ್ತಿಸುವ ಮೂಲಕ ಶಾಂತಿ ಕಾಪಾಡಲು ಸಹಕರಿಸಿ. ಪೊಲೀಸ್ ಇಲಾಖೆಯು ತನ್ನ ಕರ್ತವ್ಯವನ್ನು ಸಂಪೂರ್ಣ ನಿಷ್ಪಕ್ಷಪಾತವಾಗಿ ಮಾಡಲಿದೆ ಮತ್ತು ತಪ್ಪಿತಸ್ಥರು ಯಾರೇ ಇದ್ದರೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ” ಎಂದು ಭರವಸೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ಶೋಧ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
