ಬೆಂಗಳೂರು: : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡು 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಅವಧೂತ ಶ್ರೀ ವಿನಯ್ ಗುರೂಜಿ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿ ಆಶೀರ್ವದಿಸಿದ ಅವರು, ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಪತ್ರವನ್ನು ನೀಡಿದರು.
ಭೇಟಿಯ ವೇಳೆ ಮುಖ್ಯವಾಗಿ ಮಲೆನಾಡು ಭಾಗದ ರೈತರು ಹಾಗೂ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ವಿನಯ್ ಗುರೂಜಿ ಅವರು ಮುಖ್ಯಮಂತ್ರಿಗಳ ಗಮನ ಸೆಳೆದರು. ಮಲೆನಾಡು ಭಾಗದ ರೈತರ ಸಂಕಷ್ಟಗಳಿಗೆ ಹಾಗೂ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರವೇ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದರು.
ಅಲ್ಲದೆ, ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲು ಪ್ರತಿಯೊಂದು ತಾಲೂಕು ಕೇಂದ್ರದಲ್ಲೂ ಸಾರ್ವಜನಿಕರಿಗೆ ಉತ್ತಮ ಹಾಗೂ ಉಚಿತ ವೈದ್ಯಕೀಯ ಸೇವೆ ದೊರೆಯುವಂತೆ 100 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ರಾಜ್ಯದ ಅಭಿವೃದ್ಧಿ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ತಕ್ಷಣ ಕೈಗೊಳ್ಳಬೇಕಾದ ವಿವಿಧ ಪ್ರಮುಖ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಈ ಹಿಂದೆ ‘ಅಧಿಕಾರವನ್ನು ಒದ್ದು ಕಿತ್ತುಕೊಳ್ಳಬೇಕು’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹಲವು ವರ್ಷಗಳ ಹಿಂದೆ ನೀಡಿದ್ದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆ ನಡುವೆಯೇ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಕುರಿತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದರು.
