ನವದೆಹಲಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ತೀವ್ರವಾಗಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದ ಅವರು, ಜನರ ಪ್ರಾಣ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾವಾರು ಸಮಸ್ಯೆಗಳ ಬಗ್ಗೆ ಮನವರಿಕೆ: ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆನೆಗಳ ದಾಳಿ ಮಿತಿಮೀರಿದೆ. ಅರಣ್ಯದ ಅಂಚಿನಲ್ಲಿ ವಾಸಿಸುವ ರೈತರು ಮತ್ತು ದನಗಾಹಿಗಳು ನಿರಂತರವಾಗಿ ಬಲಿಯಾಗುತ್ತಿದ್ದಾರೆ. ಅನೇಕರು ಗಾಯಗೊಂಡು ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ಎದುರಿಸಲು ಕೇಂದ್ರದಿಂದ ವಿಶೇಷ ತಾಂತ್ರಿಕ ಮತ್ತು ಆರ್ಥಿಕ ನೆರವಿನ ಅಗತ್ಯವಿದೆ ಎಂದು ಕುಮಾರಸ್ವಾಮಿ ವಿವರಿಸಿದರು.
ಸಚಿವ ಭೂಪೇಂದ್ರ ಯಾದವ್ ಭರವಸೆ: ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಭೂಪೇಂದ್ರ ಯಾದವ್ ಅವರು, ಪ್ರಸ್ತುತ ನಡೆಯುತ್ತಿರುವ ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ರಾಜ್ಯದ ಈ ಸಮಸ್ಯೆಗೆ ತ್ವರಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.
ಇಲಾಖೆಗಳ ನಡುವೆ ಸಮನ್ವಯ: ಇದೇ ಸಂದರ್ಭದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಇಲಾಖೆ ಹಾಗೂ ಅರಣ್ಯ ಇಲಾಖೆಯ ನಡುವಿನ ಅಂತರ ಸಚಿವಾಲಯ ವಿಷಯಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು. ಉಕ್ಕು ಉದ್ಯಮದ ಬೆಳವಣಿಗೆಗೆ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಸಹಕಾರ ಮತ್ತು ಕೈಗಾರಿಕಾ ಅಭಿವೃದ್ಧಿಯ ಹಾದಿಯಲ್ಲಿ ಪರಿಸರ ಸಮತೋಲನ ಕಾಪಾಡುವ ಬಗ್ಗೆ ಸಚಿವದ್ವಯರು ಸುದೀರ್ಘ ಚರ್ಚೆ ನಡೆಸಿದರು.
