ಬೆಂಗಳೂರು: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ತರಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಂದಿರುವ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ’ವು ಸಂವಿಧಾನದ 19ನೇ ಪರಿಚ್ಛೇದದಡಿ ನೀಡಲಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ನೇರ ಉಲ್ಲಂಘನೆಯಾಗಿದೆ ಎಂದು ಕಿಡಿಕಾರಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಚರ್ಚಿಸುವ ಬದಲು ದ್ವೇಷದ ರಾಜಕಾರಣಕ್ಕಾಗಿ ಈ ವಿಧೇಯಕವನ್ನು ತರಲಾಗಿದೆ ಎಂದು ಅವರು ಆರೋಪಿಸಿದರು.
ಸರ್ಕಾರ ಸ್ಥಾಪಿಸಿರುವ ಫ್ಯಾಕ್ಟ್ ಚೆಕ್ ಏಜೆನ್ಸಿಯ ಬಗ್ಗೆ ಮಾತನಾಡಿದ ಸಚಿವೆ, ಈ ಏಜೆನ್ಸಿಗೆ ವರ್ಷಕ್ಕೆ 3 ರಿಂದ 4 ಕೋಟಿ ರೂ. ಸಾರ್ವಜನಿಕ ಹಣವನ್ನು ವ್ಯಯಿಸಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಪರ ಒಲವಿರುವ ಖಾಸಗಿ ಸಂಸ್ಥೆಗಳು ಮತ್ತು ವ್ಯಕ್ತಿಗಳನ್ನು ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರಕ್ಕೆ ಬೇಕಾದಂತೆ ವರದಿ ಪಡೆಯಲಾಗುತ್ತಿದೆ. ಪ್ರಿಯಾಂಕ್ ಖರ್ಗೆ ನೇತೃತ್ವದ ಈ ಏಜೆನ್ಸಿಯು ಕೇವಲ ಬಿಜೆಪಿ ಕಾರ್ಯಕರ್ತರು, ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದ ಬಳಕೆದಾರರ ಮೇಲೆ ಕೇಸ್ ದಾಖಲಿಸಲು ಬಳಕೆಯಾಗುತ್ತಿದೆ. ಈ ವ್ಯವಸ್ಥೆಯ ಮೂಲಕ ನ್ಯಾಯಾಂಗದ ಕೆಲಸವನ್ನು ಕಾರ್ಯಾಂಗವೇ ಮಾಡಲು ಹೊರಟಿದ್ದು, ಹತ್ತು ವರ್ಷಗಳವರೆಗೆ ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಿರುವುದು ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದು ಟೀಕಿಸಿದರು.
ಈ ವಿಧೇಯಕದ ಮೂಲಕ ಯಾವುದೇ ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಂಘ ಸಂಸ್ಥೆಗಳನ್ನು ಮತ್ತು ಕನ್ನಡ ಸಂಘಟನೆಗಳನ್ನು ದಮನ ಮಾಡಲು ಕಾಂಗ್ರೆಸ್ ಮುಂದಾಗಿದೆ ಎಂದು ದೂರಿದರು. ರಾಹುಲ್ ಗಾಂಧಿಯವರು ಪ್ರಧಾನಿ ಬಗ್ಗೆ ನೀಡಿದ ಹೇಳಿಕೆಗಳು ಹಾಗೂ ಹುಬ್ಬಳ್ಳಿ, ಮೈಸೂರು ಭಾಗದಲ್ಲಿ ಠಾಣೆ ಸುಟ್ಟವರ ಮೇಲಿನ ಕೇಸ್ಗಳನ್ನು ಹಿಂಪಡೆದಿರುವುದು ಸರ್ಕಾರದ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ ಎಂದರು.
ಈ ಅಪಾಯಕಾರಿ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರಪತಿಗಳ ಗಮನಕ್ಕೂ ಈ ವಿಚಾರವನ್ನು ತರಲಾಗುವುದು ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ನರೇಂದ್ರ ರಂಗಪ್ಪ ಮತ್ತು ಎಸ್. ಹರೀಶ್ ಉಪಸ್ಥಿತರಿದ್ದರು.
