ಬೆಂಗಳೂರು: ಅಂತರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ಘೋಷಿಸಿದೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ನಡೆದ ‘ಕರ್ನಾಟಕ ಒಲಿಂಪಿಕ್ 2025’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಮಹತ್ವಾಕಾಂಕ್ಷೆಯೊಂದಿಗೆ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಸಾಧಕರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಮುಡಿಗೇರಿಸಿಕೊಳ್ಳುವ ಕ್ರೀಡಾಪಟುಗಳಿಗೆ 3 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಲು ಈ ಆರ್ಥಿಕ ನೆರವು ದೊಡ್ಡ ಪ್ರೇರಣೆಯಾಗಲಿದೆ.
“ಕರ್ನಾಟಕದ ಕ್ರೀಡಾಪಟುಗಳಲ್ಲಿ ಅದ್ಭುತ ಪ್ರತಿಭೆಯಿದೆ. ಕಠಿಣ ಪರಿಶ್ರಮ ಮತ್ತು ಛಲವಿದ್ದರೆ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು ಅಸಾಧ್ಯವೇನಲ್ಲ. ನಮ್ಮ ರಾಜ್ಯದ ಕ್ರೀಡಾಪಟುಗಳು ಈ ಸಾಧನೆ ಮಾಡುವ ವಿಶ್ವಾಸ ನನಗಿದೆ” ಎಂದು ಸಿಎಂ ಆಶಯ ವ್ಯಕ್ತಪಡಿಸಿದರು.
ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ – ಜನವರಿಯಲ್ಲಿ ಆದೇಶ
ಕ್ರೀಡಾಪಟುಗಳ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವ ನಿರ್ಧಾರವನ್ನು ಮುಖ್ಯಮಂತ್ರಿಗಳು ಪ್ರಕಟಿಸಿದ್ದಾರೆ. ಇದರ ಅನ್ವಯ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಶೇಕಡಾ 3 ರಷ್ಟು ಹಾಗೂ ಇತರ ಇಲಾಖೆಗಳಲ್ಲಿ ಶೇಕಡಾ 2 ರಷ್ಟು ಮೀಸಲಾತಿಯನ್ನು ಕ್ರೀಡಾಪಟುಗಳಿಗೆ ನೀಡಲಾಗುವುದು. ಈ ಕುರಿತಾದ ಅಧಿಕೃತ ಸರ್ಕಾರಿ ಆದೇಶವನ್ನು ಜನವರಿ 2026 ರಲ್ಲಿ ಹೊರಡಿಸಲಾಗುವುದು ಎಂದು ಅವರು ಭರವಸೆ ನೀಡಿದ್ದು, ಇದು ಕ್ರೀಡೆಯನ್ನೇ ವೃತ್ತಿಯನ್ನಾಗಿ ಸ್ವೀಕರಿಸುವ ಯುವಜನರಿಗೆ ಆರ್ಥಿಕ ಮತ್ತು ವೃತ್ತಿ ಬದುಕಿನ ಭದ್ರತೆ ನೀಡುವಲ್ಲಿ ದೊಡ್ಡ ಬೆಂಬಲವಾಗಲಿದೆ.
ಸಕ್ರಿಯವಾಗಿರುವ ಕರ್ನಾಟಕ ಒಲಿಂಪಿಕ್ ಸಂಸ್ಥೆ
ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದ ಸಿಎಂ, ಆಂಧ್ರ ಮತ್ತು ಕೇರಳ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಸಂಸ್ಥೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.
“ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಕ್ರೀಡಾಸ್ಪೂರ್ತಿ ಮುಖ್ಯ. ಗುರಿ ಸಾಧನೆಯೇ ಜೀವನದ ಧ್ಯೇಯವಾಗಬೇಕು,” ಎಂದು ಸಾಧಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.
